ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ 'ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ' ಪ್ರದಾನ

ಮಂಗಳೂರು

news-details

ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪತ್ರಿಕೋದ್ಯಮ ಇತಿಹಾಸದಲ್ಲಿ ಮೊದಲ ಬಾರಿಗೆ ನೀಡಲಾದ ಪ್ರತಿಷ್ಠಿತ ' ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ-2024 ' ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಬುಧವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.

ಸಹಕಾರ, ಸಮಾಜಸೇವೆ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಈ ನಾಡಿಗೆ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಗೆ 'ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ' ಯನ್ನು ಕರ್ನಾಟಕ ವಿಧಾನಪರಿಷತ್ ಸಭಾಪತಿಗಳಾದ ಶ್ರೀ ಬಸವರಾಜ ಎಸ್. ಹೊರಟ್ಟಿ ಅವರು ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಡೆದ ಕರ್ನಾಟಕ ಸಂಭ್ರಮ ಸಮಾರಂಭದಲ್ಲಿ ಪ್ರದಾನ ಮಾಡಿದರು.

ಡಾ.ಎಂ,ಎನ್. ರಾಜೇಂದ್ರ ಕುಮಾರ್ ಸಹಕಾರ ಕ್ಷೇತ್ರದಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ನಿರಂತರವಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡು ಸರ್ವಧರ್ಮಿಯರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಇವರು ಸಹಕಾರ ಕ್ಷೇತ್ರ ಮತ್ತು ಸಾಮಾಜಿಕ ಸೇವಾ ವಲಯದಲ್ಲಿಗೈದ ಅತ್ಯುನ್ನತ ಸಮಾಜ ಸೇವೆಗೆ ಇದೀಗ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಸಹಕಾರ ಕ್ಷೇತ್ರದಲ್ಲಿಗೈದ ಸಮಾಜ ಸೇವೆಗೆ ಪ್ರಶಸ್ತಿ : ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಾರ್ಥಕ , ಪ್ರಾಮಾಣಿಕ ಸೇವೆಯನ್ನು ಕಳೆದ 30 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಗೈಯುತ್ತಿರುವ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರು ಈ ಬ್ಯಾಂಕ್ ನ್ನು ಅತ್ಯುನ್ನತ ಮಟ್ಟಕ್ಕೇರಿಸಿದ್ದಾರೆ . ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಯ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಿದ ಇವರು ಸಹಕಾರಿ ರಂಗಕ್ಕೆ ಹೊಸ ಆಯಾಮವನ್ನು ತಂದುಕೊಟ್ಟವರು. ಕೋರ್ ಬ್ಯಾಂಕಿಂಗ್ ನಂತಹ ಉತ್ಕೃಷ್ಟ ತಂತ್ರಜ್ಞಾನವನ್ನು ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡಿದ ಶ್ರೇಯಸ್ಸು ರಾಜೇಂದ್ರ ಕುಮಾರ್ ಅವರದ್ದು. ಸುಸಜ್ಜಿತ ವಾಹನದಲ್ಲಿ ಮೊಬೈಲ್ ಬ್ಯಾಂಕ್ ಸೇವೆಯನ್ನು ರಾಜ್ಯದ ಸಹಕಾರಿ ರಂಗದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಹೆಗ್ಗಳಿಕೆ ಕೂಡ ಇವರದ್ದು. ಸಹಕಾರ , ಸಾಮಾಜಿಕ, ಬ್ಯಾಂಕಿಂಗ್ , ಧಾರ್ಮಿಕ... ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧಕರಾಗಿ, ನವೋದಯ ಸ್ವ ಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆಯನ್ನು ರೂಪಿಸಿದ ರಾಜೇಂದ್ರ ಕುಮಾರ್ ರಾಜ್ಯದ ಧೀಮಂತ ಸಹಕಾರಿ ನಾಯಕರಲ್ಲಿ ಒಬ್ಬರು. ಮುಖ್ಯವಾಗಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಪ್ರಾಶಸ್ತ್ಯವನ್ನು ನವೋದಯ ಸ್ವಸಹಾಯ ಸಂಘಗಳ ಮೂಲಕ ನೀಡಿ , ಆರ್ಥಿಕ ಚೈತನ್ಯವನ್ನು ತುಂಬಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಗಣಕ ಯಂತ್ರ ವಿಜ್ಞಾನಿ, ಏಷ್ಯಾದ ಸಾಂಖ್ಯಿಕ ವಿಧಿವಿಜ್ಞಾನ ನಿರ್ದೇಶಕರಾದ ಡಾ. ಎಸ್. ಎಸ್. ಐಯ್ಯಂಗಾರ್, ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ತುಮಕೂರು ಇದರ ಉಪ ಕುಲಪತಿ ಡಾ. ಕೆ. ಜಿ. ಲಿಂಗೇಗೌಡ, ಉದ್ಯಮಿ ಹಾಗೂ ಸಮಾಜಸೇವಕ ಡಾ. ಕೆ. ಜಿ. ಪುರುಷೋತ್ತಮ್, ಅಬಕಾರಿ ಇಲಾಖೆಯ ಉಪ ಆಯುಕ್ತ ಡಾ. ಬಿ.ಆರ್. ಹಿರೇಮಠ್, ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕರಾದ ನಾಗರಾಜ್ ಕೆ. ಎಸ್, ದಿ . ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಇದರ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್, ಗೌರವ ಅಧ್ಯಕ್ಷರಾದ ಎ. ನಾರಾಯಣಮೂರ್ತಿ ಹಾಗೂ ಅಧ್ಯಕ್ಷರಾದ ಗಣೇಶ್ ಕಾಸರಗೋಡು ಮೊದಲಾದವರು ಉಪಸ್ಥಿತರಿದ್ದರು.

news-details